ಕುಮಟಾ ಸೆಪ್ಟೆಂಬರ್ 26: ಕುಮಟಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಹಂದಿಗೋಣ ಸಮೀಪ ಗ್ಯಾಸ್ ತುಂಬಿದ ಟ್ಯಾಂಕರ್ ವೊಂದು ಪಲ್ಟಿಯಾಗಿದೆ. ಈ ಟ್ಯಾಂಕರ್ ಮಂಗಳೂರಿನಿಂದ ಮುಂಬೈಗೆ ತೆರಳುತ್ತಿತ್ತು ಎಂದು ಹೇಳಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿಯಾಗಿ ರಸ್ತೆಗೆ ಅಡ್ಡ ಬಿದ್ದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಟ್ಯಾಂಕರ್ ನಿಂದ ಸಣ್ಣ ಪ್ರಮಾಣದಲ್ಲಿ ಅನಿಲ ಸೋರಿಕೆ ಆಗುತ್ತಿದೆ ಎಂಬ ಮಾಹಿತಿ ತಿಳಿದುಬಂದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ ಕುಮಟಾ ಮಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಸಂಜೆ 4 ಗಂಟೆ ತನಕ ತಡೆಹಿಡಿಯಲಾಗಿದೆ. ಟ್ರಾಫಿಕ್ ಜಾಮ್ ನಿಯಂತ್ರಿಸುವ ಸಲುವಾಗಿ ಚಂದಾವರ ಮೂಲದ ರಸ್ತೆಯನ್ನು ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.