ಬೆಂಗಳೂರು: ನಟ ದರ್ಶನ್ ಅವರ ಪತ್ನಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಅಶ್ಲೀಲ ಹಾಗೂ ಅವಮಾನಕಾರಿ ಸಂದೇಶಗಳನ್ನು ಕಳುಹಿಸಿದ್ದ ಆರೋಪದ ಹಿನ್ನೆಲೆಯಲ್ಲಿ ಸೈಬರ್ ಕ್ರೈಂ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.
ದೂರು ದಾಖಲಾಗುತ್ತಿದ್ದಂತೆಯೇ ಪ್ರಕರಣಕ್ಕೆ ಸಂಬಂಧಿಸಿದ ಕೆಲವು ಸೋಶಿಯಲ್ ಮೀಡಿಯಾ ಖಾತೆಗಳು ಅಳಿಸಲಾಗಿರುವುದು ಅಥವಾ ತಾತ್ಕಾಲಿಕವಾಗಿ ನಿಷ್ಕ್ರಿಯಗೊಂಡಿರುವುದು ಪೊಲೀಸರ ಗಮನಕ್ಕೆ ಬಂದಿದೆ. ಇದರಿಂದ ಆರೋಪಿಗಳು ತಮ್ಮ ಗುರುತು ಮರೆಮಾಚುವ ಪ್ರಯತ್ನ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಸೈಬರ್ ಪೊಲೀಸ್ ಮೂಲಗಳ ಪ್ರಕಾರ, ದೂರುದಲ್ಲಿ ಉಲ್ಲೇಖವಾಗಿರುವ ಹಲವು ಖಾತೆಗಳ ತಾಂತ್ರಿಕ ವಿವರಗಳನ್ನು ಸಂಗ್ರಹಿಸಲು ಸಾಮಾಜಿಕ ಜಾಲತಾಣ ಕಂಪನಿಗಳೊಂದಿಗೆ ಸಂಪರ್ಕ ಸಾಧಿಸಲಾಗಿದೆ. ಸಂಬಂಧಿತ ಖಾತೆಗಳ ಐಪಿ ವಿಳಾಸ, ಲಾಗಿನ್ ಮಾಹಿತಿ ಮತ್ತು ಬಳಕೆದಾರರ ವಿವರಗಳನ್ನು ಪಡೆಯುವ ಪ್ರಕ್ರಿಯೆ ನಡೆಯುತ್ತಿದೆ.
ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಮಹಿಳೆಯರ ವಿರುದ್ಧದ ಆನ್‌ಲೈನ್ ಕಿರುಕುಳಕ್ಕೆ ಸಂಬಂಧಿಸಿದ ಕಾನೂನು ವಿಧಿಗಳನ್ನು ಅನ್ವಯಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವ ಸಾಧ್ಯತೆ ಇದೆ.