Ticker

6/recent/ticker-posts
Responsive Advertisement

News: ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಗೆ ವಿಲೀನಗೊಳಿಸಲು ಸಿಎಂಗೆ ಕೋಟ ಶ್ರೀನಿವಾಸ ಪೂಜಾರಿ ಮನವಿ

ಬೆಂಗಳೂರು: ಕೊಂಕಣ ರೈಲ್ವೆ ನಿಗಮವನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಿ ಕರಾವಳಿ ಭಾಗದ ರೈಲ್ವೆ ಅಭಿವೃದ್ಧಿಗೆ ವೇಗ ನೀಡುವಂತೆ ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಕೊಂಕಣ ರೈಲ್ವೆ ಕಳೆದ ಹಲವು ವರ್ಷಗಳಿಂದ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿ ಹೊಂದಿಲ್ಲ. ಇನ್ನೂ ಬಹುತೇಕ ಮಾರ್ಗದಲ್ಲಿ ಏಕ ಹಳಿಯಲ್ಲೇ ರೈಲು ಸಂಚಾರ ನಡೆಯುತ್ತಿರುವುದರಿಂದ ಪ್ರಯಾಣಿಕರಿಗೆ ತೊಂದರೆ ಉಂಟಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ನಿಗಮವನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಿದರೆ ಕೇಂದ್ರದ ಅನುದಾನದಡಿ ಹಳಿ ದ್ವಿಪಥೀಕರಣ, ನಿಲ್ದಾಣಗಳ ಆಧುನೀಕರಣ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳು ವೇಗ ಪಡೆಯಲಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಯೋಜನೆ ಆರಂಭದ ವೇಳೆ ಕರ್ನಾಟಕ ಸರ್ಕಾರ ಬಂಡವಾಳ ಹೂಡಿಕೆ ಮಾಡಿದ್ದರೂ, ಮೂಲ ಒಪ್ಪಂದದಂತೆ ಭಾರತೀಯ ರೈಲ್ವೆಯೊಂದಿಗೆ ವಿಲೀನ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ ಎಂದು ಅವರು ಗಮನ ಸೆಳೆದಿದ್ದಾರೆ. ಇತರೆ ರೈಲ್ವೆ ಮಾರ್ಗಗಳಿಗೆ ಕೇಂದ್ರದಿಂದ ನೇರ ಅನುದಾನ ದೊರೆಯುತ್ತಿದ್ದರೆ, ಕೊಂಕಣ ರೈಲ್ವೆ ಪ್ರತ್ಯೇಕ ನಿಗಮವಾಗಿರುವುದರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ವಿಳಂಬವಾಗುತ್ತಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಪ್ರಸ್ತುತ ಮಾರ್ಗದಲ್ಲಿ ರೈಲುಗಳ ಸಂಚಾರ ದಟ್ಟಣೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಡಬ್ಲಿಂಗ್ ಕಾಮಗಾರಿ ತುರ್ತಾಗಿ ಅಗತ್ಯವಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವೂ ತನ್ನ ಪಾಲಿನ ಷೇರುಗಳನ್ನು ಭಾರತೀಯ ರೈಲ್ವೆಗೆ ಹಸ್ತಾಂತರಿಸಿ ವಿಲೀನ ಪ್ರಕ್ರಿಯೆಗೆ ಸಹಕರಿಸಬೇಕು ಎಂದು ಸಂಸದರು ಮನವಿ ಮಾಡಿದ್ದಾರೆ.

ಈ ವೇಳೆ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಬ್ರಿಜೇಶ್ ಚೌಟ ಸೇರಿದಂತೆ ಇತರ ಜನಪ್ರತಿನಿಧಿಗಳೂ ಉಪಸ್ಥಿತರಿದ್ದರು. ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಕೊಂಕಣ ರೈಲ್ವೆಯ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು